ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಆಗಸ್ಟ್ 21-
ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು.
ಅವರು ಇಂದು ಶಿಕ್ಷಣ ನೀತಿ ಕುರಿತಂತೆ ನಡೆಸಲಾದ ಸಭೆಯಲ್ಲಿ ಈ ವಿಷಯ ತಿಳಿಸಿದರು. ಶಿಕ್ಷಣಕ್ಕೆ ರಾಜ್ಯ ಸರ್ಕಾರ ನೀತಿ ರೂಪಿಸಲು ಸಾಧ್ಯವಿಲ್ಲ. ಏಕೆಂದರೆ ಅದು ರಾಜ್ಯದ ವಿಷಯ. ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಲಾಗಿದೆ. ಶಿಕ್ಷಣ ನೀತಿಯನ್ನು ಕೇಂದ್ರ ಹೇರಲಾಗದು. ಹೇರಲು ಹೊರಟಿರುವುದು ಒಂದು ಹುನ್ನಾರ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. ಬಹು ಸಂಸ್ಕೃತಿ, ಬಹುತ್ವ ಇರುವ ದೇಶದಲ್ಲಿ ಏಕರೂಪದ ಶಿಕ್ಷಣ ವ್ಯವಸ್ಥೆ ಮಾಡಲಾಗದು. ಆದ್ದರಿಂದ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಬಿಜೆಪಿ ಆಳ್ವಿಕೆಯ ಇತರ ರಾಜ್ಯಗಳೂ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಹಿಂದೇಟಾಕುತ್ತಿವೆ. ಕೇರಳ, ತಮಿಳು ನಾಡು ರಾಜ್ಯಗಳು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವುದಿಲ್ಲ ಎಂದು ಕೇಂದ್ರಕ್ಕೆ ಸ್ಪಷ್ಟಪಡಿಸಿವೆ ಎಂದು ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಕೇಂದ್ರ ಪುರಸ್ಕೃತ ಯೋಜನೆಗಳು ಎಲ್ಲ ರಾಜ್ಯಗಳಿಗೂ ಅನ್ವಯಿಸುವುದರಿಂದ ರಾಜ್ಯಕ್ಕೆ ಅನ್ಯಾಯವಾಗಲಾರದು ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.
ಇದರಿಂದ ಬಡವರು, ಪರಿಶಿಷ್ಟ ಜಾತಿ, ಪಂಗಡದವರು, ಹಿಂದುಳಿದವರು, ಗ್ರಾಮೀಣ ಪ್ರದೇಶದವರಿಗೆ ತೊಂದರೆಯಾಗುತ್ತದೆ. ಉನ್ನತ ಶಿಕ್ಷಣದಲ್ಲಿ ಪ್ರತಿ ವರ್ಷ ಪ್ರಮಾಣ ಪತ್ರ ನೀಡಿದರೂ, ಒಂದು ವರ್ಷ, ಎರಡು ವರ್ಷ ಓದಿದವರಿಗೆ ಎಷ್ಟು ಉದ್ಯೋಗಾವಕಾಶ ದೊರೆಯಲು ಸಾಧ್ಯ? ಉದ್ಯೋಗವಕಾಶ ದೊರೆತು ಹೋದ ಬಡವರ ಮಕ್ಕಳು ಮತ್ತೆ ಓದಲು ಎಷ್ಟು ಅವಕಾಶ ದೊರೆಯುವುದು? ಎಂಬ ಅನುಮಾನ ವ್ಯಕ್ತಪಡಿಸಿದರು.
ಈ ಶಿಕ್ಷಣ ನೀತಿ ಜಾರಿಗೊಳಿಸಲು ಅಗತ್ಯ ಮೂಲಸೌಲಭ್ಯಗಳು ಶಿಕ್ಷಣ ಸಂಸ್ಥೆಗಳಲ್ಲಿ ಇಲ್ಲ. ಇದರಿಂದ ಅನಗತ್ಯ ಗೊಂದಲಗಳು ಸೃಷ್ಟಿಯಾಗಿದೆ ಎಂದು ಮುಖ್ಯಮಂತ್ರಿಯವರು ಅಭಿಪ್ರಾಯಪಟ್ಟರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.