ಸರಕಾರಿ ನೌಕರರ ಬೇಡಿಕೆಗಳ ಬಗ್ಗೆ ಈಗಾಗಲೇ ಚರ್ಚೆ ನಡೆಸಲಾಗಿದೆ. ಶೀಘ್ರದಲ್ಲಿಯೇ ಇನ್ನೊಮ್ಮೆ ನೌಕರರ ಸಂಘದ ಮುಖಂಡರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.
ಸರಕಾರಿ ನೌಕರರಿಗೆ ಏಳನೇ ವೇತನ ಜಾರಿ ಸೇರಿದಂತೆ ಅವರ ಇತರೆ ಬೇಡಿಕೆಗಳ ಈಡೇರಿಕೆಗೆ ಸರಕಾರ ಬದ್ಧವಾಗಿದೆ ಎಂದು ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದ್ದಾರೆ.
ಕಲಬುರಗಿಯಲಲಿ ಸರಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಚಿವರ ಹೇಳಿಕೆ
ಇನ್ನೊಮ್ಮೆ ನೌಕರರ ಸಂಘದವರನ್ನು ಕರೆಯಿಸಿ ಮುಖ್ಯಮಂತ್ರಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ
ಏಳನೇ ವೇತನ ಆಯೋಗವನ್ನು ಯಥಾವತ್ ಜಾರಿಗೊಳಿಸಬೇಕು ಎಂದು ನೌಕರರ ಸಂಘದ ಒತ್ತಾಯ
ಕಲಬುರಗಿ: ಸರಕಾರಿ ನೌಕರರಿಗೆ ಏಳನೇ ವೇತನ ಆಯೋಗ ಸೇರಿ ಇತರೆ ಬೇಡಿಕೆಗಳ ಈಡೇರಿಕೆಗೆ ಸರಕಾರ ಶೀಘ್ರವೇ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ತಿಳಿಸಿದರು.
ರಾಜ್ಯ ಸರಕಾರಿ ನೌಕರರ ಸಂಘದಿಂದ ನಗರದ ಎಸ್ಎಂ ಪಂಡಿತ್ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲೆಯ ಸರಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ಸರಕಾರಿ ನೌಕರರ ಬೇಡಿಕೆಗಳ ಕುರಿತು ಚರ್ಚಿಸಲಾಗಿದೆ. ಮುಂದೆ ಇನ್ನೊಮ್ಮೆ ನೌಕರರ ಸಂಘದವರನ್ನು ಕರೆಯಿಸಿ ಮುಖ್ಯಮಂತ್ರಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.
ಸರಕಾರಿ ನೌಕರರ ಹಕ್ಕುಗಳನ್ನು ಈಡೇರಿಸಲು ಸರಕಾರ ಬದ್ಧವಿದೆ. ಸರಕಾರ ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನಡೆಸಲು ನಿಮ್ಮ ಸಹಕಾರ ಅಗತ್ಯವಿದೆ. ಆದ್ದರಿಂದ ಎಲ್ಲರೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಎಂದು ಹೇಳಿದರು
ಯಥಾವತ್ ಜಾರಿಯಾಗಲಿ
ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಾತನಾಡಿ, ಸರಕಾರಿ ನೌಕರರಿಗೆ ಏಳನೇ ವೇತನ ಆಯೋಗ ಶಿಫಾರಸು ಮಾಡಿದಂತೆ ಯಥಾವತ್ ಜಾರಿ ಮಾಡಬೇಕು. ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ರಾಜ್ಯವು ದೇಶದಲ್ಲಿ ಜಿಎಸ್ಟಿ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ. ಅಭಿವೃದ್ಧಿಯಲ್ಲಿ ಐದನೇ ಸ್ಥಾನದಲ್ಲಿದೆ. ಇದಕ್ಕೆ ರಾಜ್ಯ ಸರಕಾರಿ ನೌಕರರೇ ಕಾರಣವಾಗಿದ್ದು, ಇದಕ್ಕೆ ಹೆಮ್ಮೆ ಪಡಬೇಕು ಎಂದರು.